ಸಕಲೇಶಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಚಲನಚಿತ್ರ ನಿರ್ದೇಶಕ ಹಾಗೂ ಪತ್ರಕರ್ತ ಅರುಣ್ ಗೌಡ ಕರಡಿಗಾಲ ಅವರು ಹಡ್ಲಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅರುಣ್ ಗೌಡ ಕರಡಿಗಾಲ, “ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳು ಯಾವುದೇ ಖಾಸಗಿ ಶಾಲೆಯ ಮಕ್ಕಳಿಗಿಂತ ಕಡಿಮೆ ಇಲ್ಲ. ಪ್ರತಿಭಾವಂತ ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ಶಿಕ್ಷಣ ಪಡೆಯುವ ಅವಕಾಶ ಸರ್ಕಾರಿ ಶಾಲೆಗಳಲ್ಲಿದೆ. ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣದ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ ಭವಿಷ್ಯ ರೂಪಿಸಿಕೊಳ್ಳಬೇಕು. ಪ್ರತಿವರ್ಷದಂತೆ ಈ ವರ್ಷವೂ ಕಲಿಕಾ ಸಾಮಗ್ರಿಗಳನ್ನು ವಿತರಿಸಿದ್ದು, ಮುಂದಿನ ವರ್ಷವೂ ಕೈಲಾದ ಸೇವೆಯನ್ನು ಮುಂದುವರಿಸುತ್ತೇನೆ,” ಎಂದರು.
ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಪಿ. ಕೃಷ್ಣೇಗೌಡ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುವ ಸಾಮರ್ಥ್ಯವುಳ್ಳ ಶಿಕ್ಷಕರಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಶಾಲೆಯ ಮುಖ್ಯೋಪಾಧ್ಯಾಯರು ದಾನಿಗಳ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ಒದಗಿಸುತ್ತಿರುವುದು ಶ್ಲಾಘನೀಯ. ನಮ್ಮೂರಿನ ಅರುಣ್ ಗೌಡ ಅವರು ಪ್ರತಿವರ್ಷ ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯ ಸಾಮಗ್ರಿಗಳನ್ನು ವಿತರಿಸುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಸಮಾಜಮುಖಿ ಕಾರ್ಯವಾಗಿದೆ. ಇಂತಹ ಪ್ರಯತ್ನಗಳಿಂದ ಸರ್ಕಾರಿ ಶಾಲೆಗಳು ಉಳಿದು, ಮತ್ತಷ್ಟು ಬೆಳೆಯಲು ಸಾಧ್ಯ ಎಂದರು.
ಶಾಲೆಯ ಮುಖ್ಯೋಪಾಧ್ಯಾಯ ಪ್ರವೀಣ್ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿರುವ ಅರುಣ್ ಗೌಡ ಅವರಿಗೆ ಕೃತಜ್ಞತೆ ಸಲ್ಲಿಸಿದರು. “ಸರ್ಕಾರಿ ಶಾಲೆಯ ಮೇಲಿನ ಅವರ ಕಾಳಜಿ ಹಾಗೂ ಗೌರವದಿಂದ ಇಂತಹ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ನೀಡುವುದು ಅವರ ವಿದ್ಯಾಭ್ಯಾಸಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ,” ಎಂದರು.
ಈ ಸಂದರ್ಭದಲ್ಲಿ ಹೆತ್ತೂರು ಹೋಬಳಿ ಒಕ್ಕಲಿಗರ ಸಂಘದ ನಿರ್ದೇಶಕ ಚಿದಾನಂದ (ಮದನ್), ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷ ಚಿನ್ನಹಳ್ಳಿ ಬಾಲು, ಎಸ್‌ಡಿಎಂಸಿ ಅಧ್ಯಕ್ಷ ಹೂವಣ್ಣ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
previous post
